ಕೆಪಿಎಸ್ಸಿಯಲ್ಲಿ ಭ್ರಷ್ಟಾಚಾರ, ಅಧಿಕಾರಿಗಳು, ಸಿಬ್ಬಂದಿಗಳ ಸಾಮೂಹಿಕ ವರ್ಗಾವಣೆಗೆ ಆಗ್ರಹ
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ o⁹
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಗಳಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯಲು ಅಧಿಕಾರಿಗಳು, ಸಿಬ್ಬಂದಿ ಸಾಮೂಹಿಕ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಆಯೋಗದಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲೂ ಸಹ ತಹಸೀಲ್ದಾರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
2004ರ ಕೆಎಎಸ್ ನೇಮಕಾತಿ, 2008ರ ನೇಮಕಾತಿ ಗ್ರೂಪ್-ಎ, ಗ್ರೂಪ್ ಬಿ ಹುದ್ದೆಗಳು, ಹಾಗೂ 2021ರ ಗೆಜೆಟೆಡ್ ಪ್ರೊಬೆಷನರ್ಸ್ ನೇಮಕಾತಿಯಲ್ಲಿ ಅಕ್ರಮಗಳ ಆರೋಪಗಳು ಕೇಳಿಬಂದಿದ್ದವು. 2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆದಿದ್ದು, ಕೆಪಿಎಸ್ಸಿಯ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆಯೂ ನಡೆದಿತ್ತು ಎಂದು ವೇದಿಕೆ ಮನವಿಯಲ್ಲಿ ತಿಳಿಸಿದೆ.
ಇತ್ತೀಚೆಗೆ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲೂ ಒಎಂಆರ್ ಉತ್ತರ ಪತ್ರಿಕೆ ತಿದ್ದುವಿಕೆ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಲಂಚದ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೆಪಿಎಸ್ಸಿ ಕಛೇರಿ, ಪ್ರಮುಖ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ತನಿಖೆ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೇವಲ ಅಧ್ಯಕ್ಷರನ್ನು ಹುದ್ದೆಯಿಂದ ಅಮಾನತುಗೊಳಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಆಯೋಗದೊಳಗೆ ಭ್ರಷ್ಟಾಚಾರಕ್ಕೆ ಹೊಂದಿಕೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡುವ ಮೂಲಕ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು. ಇದರಿಂದ ಪ್ರತಿಭಾವಂತ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಉದ್ಯೋಗಾವಕಾಶ ದೊರೆಯುವಂತಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕೆಪಿಎಸ್ಸಿಯ ನೇಮಕಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಅರ್ಹತೆ ಹಾಗೂ ನಿಷ್ಪಕ್ಷಪಾತತೆ ಖಚಿತಪಡಿಸಲು ರಾಜ್ಯಪಾಲರು ಹಾಗೂ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಮೂರ್ತಿ ಸಿ, ಗ್ರಾಮಾಂತರ ಅಧ್ಯಕ್ಷ ಶಿವಮೂರ್ತಿ ಎಸ್.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗ್ಯ ಶಿವಣ್ಣ, ಸತೀಶ್, ನಗರ ಅಧ್ಯಕ್ಷ ಬಸವರಾಜ್ ಹಿರೇಮಠ್, ಉಮೇಶ್ ಶಂಕರ್ ನಾಯ್ಕ್ ಹಾಗು ಸದಸ್ಯರು ಇದ್ದರು.

